ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಡುಪಿ ಜಿಲ್ಲೆಯ ಹೆಬ್ರಿ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 8ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ಮಲೆನಾಡು : ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 8ರ ತನಕ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಕಾರಣದಿಂದ ಒಣ ಹವೆ ಮುಂದುವರಿಯಲಿದೆ. ರಾತ್ರಿ ಸ್ವಲ್ಪ ಮಟ್ಟಿಗೆ ಛಳಿಯ ವಾತಾವರಣ ಇರಬಹುದು.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ತುಮಕೂರು ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 8ರ ತನಕ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ನವೆಂಬರ್ 10ರ ಸುಮಾರಿಗೆ ಫೆಸಿಫಿಕ್ ಸಾಗರದ ಜಪಾನ್ ಕಡೆಯಿಂದ ಮ್ಯಾನ್ಮಾರ್, ಥೈಲ್ಯಾಂಡ್ ದೇಶಗಳನ್ನು ದಾಟಿ ಪ್ರಭಲವಾದ ಮಾರುತಗಳು ಬಂಗಾಳಕೊಲ್ಲಿಯ ಕಡೆಗೆ ಬೀಸುವ ಸಾಧ್ಯತೆಗಳು ಗೋಚರಿಸುತ್ತಿವೆ. ಇದರ ಪರಿಣಾಮ ಕಾದು ನೋಡಬೇಕಾಗಿದೆ. ವಾಯುಭಾರ ಕುಸಿತದ ಸಾಧ್ಯತೆಗಳಿದ್ದರೆ ರಾಜ್ಯದಲ್ಲಿ ಮತ್ತೆ ಮಳೆಯ ಆಗಮನ ಆಗಬಹುದು.
No comments:
Post a Comment